ಜಿಲ್ಲೆಧಾರವಾಡಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

700 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೆಎಲ್ಇ ವೈದ್ಯಕೀಯ ಮಹಾವಿದ್ಯಾಲಯ ನಾಳೆ ಲೋಕಾರ್ಪಣೆ! ಡಾ,ಕೋರೆ

ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯಿಂದ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಉತ್ತರ ಕರ್ನಾಟಕದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಕೆಎಲ್ಇ ಸಂಸ್ಥೆಯ ಗೌರವಾಧ್ಯಕ್ಷ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ₹700 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿಗಳ ವಸತಿ ನಿಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಆಧುನಿಕ ವೈದ್ಯಕೀಯ ಶಿಕ್ಷಣ ನೀಡುವುದರ ಜತೆಗೆ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ಇಡೀ ಯೋಜನೆಯನ್ನು ರೂಪಿಸಲಾಗಿದೆ ಎಂದರು.
ಸೆ.19ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಜನಪ್ರತಿನಿಧಿಗಳು, ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪರಮಪೂಜ್ಯ ಜಗದ್ಗುರುಗಳ ದಿವ್ಯ ಸಾನಿಧ್ಯವೂ ಇರಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ವಾತಾವರಣ
ವೈದ್ಯಕೀಯ ವಿದ್ಯಾರ್ಥಿಗಳು ಕೇವಲ ತರಗತಿಯೊಳಗೆ ಕುಳಿತು ಪಾಠ ಕಲಿಯುವುದಕ್ಕೆ ಸೀಮಿತವಾಗಬಾರದು ಎಂಬ ಉದ್ದೇಶದಿಂದ ಇಡೀ ಕ್ಯಾಂಪಸ್‌ನಲ್ಲಿ ಆಧುನಿಕ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಕ್ಯಾಂಪಸ್‌ನಾದ್ಯಂತ ವೈಫೈ ಸೌಲಭ್ಯ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಯಾವುದೇ ಸ್ಥಳದಲ್ಲಿಯೂ ಕುಳಿತು ಅಧ್ಯಯನ ಮಾಡಲು ಅವಕಾಶವಿದೆ ಎಂದರು.
ಕಾಲೇಜಿನಲ್ಲಿ ಆಧುನಿಕ ತರಗತಿ ಕೊಠಡಿಗಳು ಹಾಗೂ ಉಪನ್ಯಾಸ ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಏಕಕಾಲದಲ್ಲಿ ಕಲಿಯುವ ವ್ಯವಸ್ಥೆ ಮಾಡಲಾಗಿದೆ. ತಂತ್ರಜ್ಞಾನ ಆಧಾರಿತ ಬೋಧನೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆ, ಕೌಶಲ್ಯ ಪ್ರಯೋಗಾಲಯ
ವೈದ್ಯಕೀಯ ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಮೇಲೆ ತರಬೇತಿ ನೀಡುವ ಮೊದಲು ವಿವಿಧ ವೈದ್ಯಕೀಯ ಪರಿಸ್ಥಿತಿಗಳನ್ನು ಪ್ರಾಯೋಗಿಕವಾಗಿ ಅರ್ಥಮಾಡಿಕೊಳ್ಳಲು ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆ ಹಾಗೂ ಕೌಶಲ್ಯ ಪ್ರಯೋಗಾಲಯ ಸ್ಥಾಪಿಸಲಾಗಿದೆ.
ಮಾನವ ದೇಹದ ವಿವಿಧ ಅಂಗಾಂಗಗಳ ಕಾರ್ಯವಿಧಾನ, ತುರ್ತು ಪರಿಸ್ಥಿತಿಗಳ ನಿರ್ವಹಣೆ ಹಾಗೂ ವಿವಿಧ ವೈದ್ಯಕೀಯ ಸನ್ನಿವೇಶಗಳನ್ನು ಪ್ರಾಯೋಗಿಕವಾಗಿ ಕಲಿಯಲು ಈ ವ್ಯವಸ್ಥೆ ನೆರವಾಗಲಿದೆ. ವಿದ್ಯಾರ್ಥಿಗಳ ವೈದ್ಯಕೀಯ ಕೌಶಲ್ಯವನ್ನು ಹೆಚ್ಚಿಸುವುದರ ಜತೆಗೆ ತುರ್ತು ಸೇವೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೂ ತರಬೇತಿ ನೀಡಲು ಇದನ್ನು ಬಳಸಿಕೊಳ್ಳುವ ಉದ್ದೇಶವಿದೆ ಎಂದರು.

ಪೊಲೀಸ್, ಚಾಲಕರಿಗೂ ತರಬೇತಿ
ಹೃದಯಾಘಾತ, ಅಪಘಾತ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪೊಲೀಸ್ ಸಿಬ್ಬಂದಿ, ಚಾಲಕರು ಹಾಗೂ ಇತರ ತುರ್ತು ಸೇವಾ ಸಿಬ್ಬಂದಿಗೆ ತರಬೇತಿ ನೀಡುವ ಯೋಜನೆಯಿದೆ. ಬೆಳಗಾವಿಯಲ್ಲಿ ಈಗಾಗಲೇ ಇಂತಹ ತರಬೇತಿ ಕಾರ್ಯ ನಡೆಯುತ್ತಿದ್ದು, ಅದನ್ನು ಹುಬ್ಬಳ್ಳಿಯಲ್ಲಿಯೂ ವಿಸ್ತರಿಸಲಾಗುವುದು ಎಂದು ಡಾ. ಕೋರೆ ಹೇಳಿದರು.

ನಾಲಾ ಅಭಿವೃದ್ಧಿ
ಕಾಲೇಜು ಆವರಣದ ಮಧ್ಯಭಾಗದಲ್ಲಿ ಹಾದುಹೋಗುತ್ತಿದ್ದ ನಾಲಾ ಹಲವು ವರ್ಷಗಳಿಂದ ಸಮಸ್ಯೆಯಾಗಿತ್ತು. ಸುಮಾರು ಒಂದೂವರೆ ವರ್ಷಗಳ ಕಾಲ ಕೆಲಸ ಕೈಗೊಂಡು ನಾಲಾವನ್ನು ಅಭಿವೃದ್ಧಿಪಡಿಸಲಾಗಿದೆ. ಇದೀಗ ಆ ಪ್ರದೇಶದ ಸ್ವಚ್ಛತೆ ಹಾಗೂ ಪರಿಸರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳು ಸಂಜೆ ಸಮಯದಲ್ಲಿ ಓಡಾಡಲು ಹಾಗೂ ಅಧ್ಯಯನ ಮಾಡಲು ಅನುಕೂಲವಾಗುವಂತೆ ಪರಿಸರವನ್ನು ಸುಂದರಗೊಳಿಸಲಾಗಿದೆ ಎಂದರು.

ಆಸ್ಪತ್ರೆಗೆ ಭಾರಿ ಸ್ಪಂದನೆ
ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಈಗಾಗಲೇ ಕಾರ್ಯಾರಂಭ ಮಾಡಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಪ್ರತಿದಿನ ಒಂದು ಸಾವಿರಕ್ಕೂ ಅಧಿಕ ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 300 ಒಳರೋಗಿಗಳು ದಾಖಲಾಗುತ್ತಿದ್ದಾರೆ. ಆಸ್ಪತ್ರೆಯಲ್ಲಿ ಎರಡು ವಾರಗಳಲ್ಲೇ 200ಕ್ಕೂ ಅಧಿಕ ಹೆರಿಗೆಗಳು ನಡೆದಿವೆ ಎಂದು ಮಾಹಿತಿ ನೀಡಿದರು.
ಸೂಪರ್ ಸ್ಪೆಷಾಲಿಟಿ ಸೇರಿದಂತೆ ವಿವಿಧ ವೈದ್ಯಕೀಯ ವಿಭಾಗಗಳ ಚಿಕಿತ್ಸಾ ಸೌಲಭ್ಯಗಳನ್ನು ಆಸ್ಪತ್ರೆಯಲ್ಲಿ ಕಲ್ಪಿಸಲಾಗಿದೆ. ಹುಬ್ಬಳ್ಳಿ ಮಾತ್ರವಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೂ ಇದರ ಪ್ರಯೋಜನ ದೊರೆಯಲಿದೆ ಎಂದರು.

ಹಾಸ್ಟೆಲ್, ವಸತಿ ಸೌಲಭ್ಯ
ವಿದ್ಯಾರ್ಥಿಗಳಿಗಾಗಿ ಒಂದು ಹಾಸ್ಟೆಲ್ ಈಗಾಗಲೇ ಸಿದ್ಧವಾಗಿದ್ದು, ಇನ್ನೂ ಮೂರು ಹಾಸ್ಟೆಲ್‌ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಗೆ ಅಗತ್ಯ ವಸತಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯೂ ಆರಂಭವಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ
ಕೊಪ್ಪಳದಿಂದ ಹಾವೇರಿವರೆಗೆ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಎಲ್ಇ ಸಂಸ್ಥೆಯಿಂದ ಆರೋಗ್ಯ ಜಾಗೃತಿ ಹಾಗೂ ವೈದ್ಯಕೀಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಈ ಭಾಗದ ಜನರಿಗೆ ಉತ್ತಮ ವೈದ್ಯಕೀಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಸಂಸ್ಥೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಡಾ. ಕೋರೆ ಹೇಳಿದರು.
ಹುಬ್ಬಳ್ಳಿಯಲ್ಲಿ ನಿರ್ಮಿಸಿರುವ ಈ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉತ್ತರ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯಾಗಲಿದೆ. ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂರು ಉದ್ದೇಶಗಳೊಂದಿಗೆ ಸಂಸ್ಥೆ ಈ ಯೋಜನೆಯನ್ನು ರೂಪಿಸಿದೆ ಎಂದು ಅವರು ವಿವರಿಸಿದರು.
ಇದು ಕೇವಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲ. ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಶಿಕ್ಷಣ, ವೈದ್ಯರಿಗೆ ಪ್ರಾಯೋಗಿಕ ತರಬೇತಿ ಹಾಗೂ ಜನರಿಗೆ ಗುಣಮಟ್ಟದ ಚಿಕಿತ್ಸೆ ಈ ಮೂರನ್ನೂ ಒಂದೇ ವೇದಿಕೆಯಲ್ಲಿ ಒದಗಿಸುವ ಸಮಗ್ರ ವ್ಯವಸ್ಥೆಯಾಗಿದೆ ಎಂದು ಡಾ. ಪ್ರಭಾಕರ ಕೋರೆ ಹೇಳಿದರು.

TV24 News Desk
the authorTV24 News Desk

Leave a Reply

error: Content is protected !!