



ಚಿಕ್ಕೋಡಿ:
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 21ರಂದು ರಾತ್ರಿ ಈ ಘಟನೆ ನಡೆದಿದ್ದು, ರಣವೀರ ರಜಪೂತ ಹತ್ಯೆಯಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಶ್ರೀದೇವಿ ರಜಪೂತ ಹಾಗೂ ಆಕೆಯ ಶಾಲಾ ಗೆಳೆಯ ಬೈರು ಪವಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಪೊಲೀಸರ ಪ್ರಕಾರ, ರಣವೀರ ರಜಪೂತ ಶ್ರೀದೇವಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಣವೀರನನ್ನು ಹತ್ಯೆ ಮಾಡಲು ಇಬ್ಬರೂ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸೆಪ್ಟೆಂಬರ್ 21ರಂದು ರಾತ್ರಿ ಬೈಕ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಹೇಳಿ ಬೈರು ಪವಾರ್, ರಣವೀರನನ್ನು ಕರೆಸಿಕೊಂಡಿದ್ದಾನೆ. ಈ ವೇಳೆ ರಣವೀರನ ಕುತ್ತಿಗೆ ಹಿಸುಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬೈರು ಪವಾರ್, ಶ್ರೀದೇವಿಗೆ ಕರೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಸಂಪೂರ್ಣ ಕಾರಣ ಹಾಗೂ ಘಟನೆಯ ಇತರೆ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.









