

ಬೆಳಗಾವಿ:
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31) ಕೊಲೆಯಾದವರು ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಅವರ ಪತಿ ರಾಜು ಮಾಡಮಗೇರಿ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಪತಿ ರಾಜು, ಲಕ್ಷ್ಮೀ ಅವರ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದು, ಈ ವಿಚಾರವಾಗಿ ದಂಪತಿ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಇದೇ ವಿಚಾರವಾಗಿ ಲಕ್ಷ್ಮೀ ರಾಜುವಿನಿಂದ ವಿಚ್ಛೇಧನ ಬಯಸಿ ಕೋರ್ಟ್ ಮೆಟ್ಟಿಲೇರಿದ್ದಳು. ಇದೇ ವಿಚಾರಕ್ಕೆ ರಾಜು ಕೋಪಿತನಾಗಿ ಪತ್ನಿಯನ್ನು ಕೊಲೆ ಮಾಡುವ ಉದ್ದೇಶದಿಂದ ನಿನ್ನೆ ತಡರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಲಕ್ಷ್ಮೀ ಅವರನ್ನು, ಮನೆಗೆ ಬಿಡುತ್ತೇನೆ ಎಂದು ಹೇಳಿ ಪತಿ ರಾಜು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಬಳಿಕ ಅಮಟೂರು ಗ್ರಾಮದ ಹೊರವಲಯಕ್ಕೆ ಕರೆದೊಯ್ದು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಘಟನೆಯ ಬಳಿಕ ಆರೋಪಿ ರಾಜು ಪರಾರಿಯಾಗಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತದೇಹವನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.








