ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಕಬ್ಬು ಬೆಳೆಗಾರರ ಸಭೆ ವಿಫಲವಾದ ಹಿನ್ನೆಲೆಯಲ್ಲಿ, ರೈತರ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕ್ಯೂಟ್ ಹೌಸ್‌ನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸುತ್ತಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವ ವಿಚಾರವಾಗಿ ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಮಾತುಕತೆ ನಡೆಸುತ್ತಿದ್ದಾರೆ. ರೈತರ ಬೇಡಿಕೆಗಳು ಹಾಗೂ ಕಾರ್ಖಾನೆ ಮಾಲೀಕರ ನಿಲುವಿನ ಕುರಿತು ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ.


ಸಭೆಗೆ ಶಾಸಕ ಹಾಗೂ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ, ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಆಯ್ದ ರೈತ ಮುಖಂಡರು ಆಗಮಿಸಿ ಭಾಗವಹಿಸಿದ್ದಾರೆ.
ರೈತ ಮುಖಂಡರೊಂದಿಗೆ ಸಭೆ ನಡೆಸುವ ಮೊದಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ಬಳಿಕ ರೈತರ ಮುಖಂಡರೊಂದಿಗೆ ಚರ್ಚೆ ಮುಂದುವರಿಸಿದ್ದಾರೆ.
ಕಬ್ಬಿಗೆ ಸೂಕ್ತ ಬೆಲೆ ನಿಗದಿ, ರೈತರ ಬೇಡಿಕೆಗಳ ಈಡೇರಿಕೆ ಹಾಗೂ ಸಕ್ಕರೆ ಕಾರ್ಖಾನೆಗಳ ನಿಲುವು ಸೇರಿದಂತೆ ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ. ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ, ಸರ್ಕ್ಯೂಟ್ ಹೌಸ್‌ನಲ್ಲಿ ನಡೆಯುತ್ತಿರುವ ಈ ಮಾತುಕತೆ ಮಹತ್ವ ಪಡೆದುಕೊಂಡಿದೆ.
ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವಿನ ಭಿನ್ನಾಭಿಪ್ರಾಯಗಳಿಗೆ ಪರಿಹಾರ ಕಂಡುಕೊಂಡು, ಕಬ್ಬು ಬೆಳೆಗಾರರ ಸಮಸ್ಯೆಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ನಡೆಸುತ್ತಿರುವ ಈ ಸಭೆಯ ಫಲಿತಾಂಶದತ್ತ ರೈತರು ಹಾಗೂ ಸಾರ್ವಜನಿಕರು ಗಮನಹರಿಸಿದ್ದಾರೆ.










