


ಬೆಳಗಾವಿ ಬ್ರೇಕಿಂಗ್…
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಎಂಇಎಸ್ ಸಂಘಟನೆಯಿಂದ ಆಯೋಜಿಸಲಾಗಿದ್ದ ಕರಾಳ ದಿನಾಚರಣೆಯ ರ‍್ಯಾಲಿಗೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರು 10ಕ್ಕೂ ಹೆಚ್ಚು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಗೋಗಟೆ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಕರವೇ ಶಿವರಾಮೇಗೌಡ ಬಣದ ವಾಜೀದ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್‌ನಿಂದ ಹಮ್ಮಿಕೊಳ್ಳಲಾಗಿದ್ದ ಕರಾಳ ದಿನದ ರ‍್ಯಾಲಿ ನಡೆಯುತ್ತಿದ್ದ ಸ್ಥಳದ ಕಡೆಗೆ ತೆರಳಲು ಕರವೇ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕರಾಳ ದಿನಾಚರಣೆಯ ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದರೂ ಎಂಇಎಸ್ ಸಂಘಟನೆಯಿಂದ ರ‍್ಯಾಲಿ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ರ‍್ಯಾಲಿಯತ್ತ ತೆರಳಿ ತಮ್ಮ ವಿರೋಧ ವ್ಯಕ್ತಪಡಿಸಲು ಮುಂದಾಗಿದ್ದಾರೆ.
ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿದ್ದ ಪೊಲೀಸರು ಕರವೇ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗೋಗಟೆ ಸರ್ಕಲ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಒಂದೆಡೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದ್ದರೆ, ಮತ್ತೊಂದೆಡೆ ಎಂಇಎಸ್‌ನ ಕರಾಳ ದಿನಾಚರಣೆ ಹಾಗೂ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕನ್ನಡ ಪರ ಸಂಘಟನೆಗಳ ನಡುವಿನ ಬೆಳವಣಿಗೆಗಳಿಂದ ನಗರದಲ್ಲಿ ರಾಜಕೀಯ ಮತ್ತು ಸಂಘಟನಾತ್ಮಕ ಚಟುವಟಿಕೆಗಳು ತೀವ್ರಗೊಂಡಿವೆ. ಸದ್ಯ ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮುಂದುವರಿಸಿದ್ದಾರೆ.










