ಬೆಳಗಾವಿ:


ತಾಯ್ತನದ ಮಮತೆಯನ್ನೇ ಮರೆತ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಹೆತ್ತ ತಾಯಿಯೇ ತನ್ನ ಕರುಳ ಕುಡಿಯನ್ನು ರಸ್ತೆ ಪಕ್ಕದಲ್ಲಿ ಬಿಟ್ಟು ಹೋಗಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಜನಿಸುವ ಮುನ್ನವೇ ಜಗತ್ತಿಗೆ ಬರುವ ಹಂಬಲ ಹೊತ್ತು ಬಂದಿದ್ದ ನವಜಾತ ಶಿಶು, ತಾಯಿಯ ನಿರ್ಲಕ್ಷ್ಯಕ್ಕೆ ಸಿಲುಕಿ ದುರಂತ ಅಂತ್ಯ ಕಂಡಿರುವ ಶಂಕೆ ವ್ಯಕ್ತವಾಗಿದೆ.
ಹುಟ್ಟಿದ ನವಜಾತ ಶಿಶುವನ್ನು ರಸ್ತೆ ಪಕ್ಕದಲ್ಲಿ ಯಾರೋ ಬಿಟ್ಟು ಹೋಗಿದ್ದಾರೆ ಎನ್ನಲಾಗಿದ್ದು, ನಿರ್ಜನ ಪ್ರದೇಶದಲ್ಲಿದ್ದ ಶಿಶುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಾಯಿಗಳು ಶಿಶುವನ್ನು ಎಳೆದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಈ ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ನಾಯಿಗಳನ್ನು ಓಡಿಸಲು ಪ್ರಯತ್ನಿಸಿದರೂ ಅಷ್ಟರಲ್ಲಾಗಲೇ ದುರಂತ ಸಂಭವಿಸಿರುವುದು ತಿಳಿದುಬಂದಿದೆ.
ಶಿಶುವಿನ ದೇಹ ಮತ್ತು ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಘಟನೆಯಿಂದಾಗಿ ಇಡೀ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅಥಣಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು, ಶಿಶುವನ್ನು ಯಾರು ಬಿಟ್ಟು ಹೋಗಿದ್ದಾರೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಶಿಶುವಿನ ಗುರುತು ಹಾಗೂ ಘಟನೆಗೆ ಸಂಬಂಧಿಸಿದ ಇತರ ಆಯಾಮಗಳ ಬಗ್ಗೆಯೂ ತನಿಖೆ ನಡೆಸುವ ಸಾಧ್ಯತೆಯಿದೆ.
ಹೆತ್ತ ತಾಯಿಯೇ ಮಗುವನ್ನು ಬಿಟ್ಟು ಹೋಗಿದ್ದಾರೆಯೇ ಅಥವಾ ಘಟನೆಯ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಒಟ್ಟಿನಲ್ಲಿ, ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಮಾನವೀಯತೆಯನ್ನೇ ಪ್ರಶ್ನಿಸುವಂತಿದ್ದು, ನವಜಾತ ಶಿಶುವಿನ ದುರಂತ ಸಾವಿಗೆ ಕಾರಣವೇನು ಎಂಬುದನ್ನು ಪೊಲೀಸರು ತನಿಖೆಯಿಂದ ಬಯಲಿಗೆಳೆಯಬೇಕಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.











