ಬೆಳಗಾವಿ: ಕಬ್ಬು ಬೆಳೆಗಾರರ ಕಬ್ಬಿನ ದರ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಬ್ಬಿನ ಬೆಲೆ ನಿಗದಿ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಬೇಕಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು, ಕಚೇರಿಯೊಳಗೆ ಪ್ರವೇಶಿಸಲು ಯತ್ನಿಸಿದ ಘಟನೆ ನಡೆದಿದೆ.
ಸಭೆ ಇನ್ನೂ ಆರಂಭವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರೂ ರೈತರು ಅದನ್ನು ಒಪ್ಪಿಕೊಳ್ಳದೆ ಜಿಲ್ಲಾಧಿಕಾರಿ ಕಚೇರಿಯ ಒಳಗೆ ತೆರಳಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಗೇಟ್ ಬಳಿ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ಹಾಗೂ ನೂಕಾಟವೂ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಈಗಾಗಲೇ ಹಲವು ಸುತ್ತಿನ ಸಭೆಗಳು ನಡೆದಿದ್ದರೂ ಯಾವುದೇ ಅಂತಿಮ ನಿರ್ಧಾರ ಹೊರಬಿದ್ದಿಲ್ಲ ಎಂಬ ಅಸಮಾಧಾನ ರೈತರಲ್ಲಿದೆ. ಹೀಗಾಗಿ ಮತ್ತೊಮ್ಮೆ ಸಭೆ ವಿಳಂಬವಾಗುತ್ತಿರುವುದನ್ನು ಕಂಡು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಹಾಗೂ ರೈತರನ್ನು ಸಮಾಧಾನಪಡಿಸಲು ಡಿಸಿಪಿ ನಾರಾಯಣ ಬರಮನಿ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ರೈತರೊಂದಿಗೆ ಮಾತನಾಡಿದ ಅವರು, “ಯಾವುದನ್ನೂ ಕದ್ದು ಮುಚ್ಚಿ ಮಾಡುವ ಪ್ರಶ್ನೆಯೇ ಇಲ್ಲ. ನಿಮ್ಮ ಸಮಸ್ಯೆ ಬಗೆಹರಿಸಲು ಎಲ್ಲರೂ ಪ್ರಯತ್ನ ಮಾಡುತ್ತಿದ್ದಾರೆ. ಸಭೆಯನ್ನು ಮಧ್ಯಾಹ್ನ 4:30ಕ್ಕೆ ಮುಂದೂಡಲಾಗಿದೆ. ರೈತ ಮುಖಂಡರಲ್ಲಿ ಈಗಾಗಲೇ ಅನೇಕರು ಸಭೆಯ ಒಳಗೆ ಇದ್ದಾರೆ” ಎಂದು ತಿಳಿಸಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಿದರು.
ಕಬ್ಬಿನ ಬೆಲೆಗೆ ಸೂಕ್ತ ದರ ನಿಗದಿಪಡಿಸಬೇಕು ಹಾಗೂ ರೈತರ ಬೇಡಿಕೆಗಳಿಗೆ ಸ್ಪಷ್ಟ ಪರಿಹಾರ ಸಿಗಬೇಕು ಎಂಬುದು ರೈತರ ಪ್ರಮುಖ ಒತ್ತಾಯವಾಗಿದೆ. ಸಭೆಯ ಮೂಲಕವಾದರೂ ತಮ್ಮ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯೊಂದಿಗೆ ರೈತರು ಜಿಲ್ಲಾಧಿಕಾರಿ ಕಚೇರಿಯ ಬಳಿ ಜಮಾಯಿಸಿದ್ದಾರೆ.
ಒಟ್ಟಿನಲ್ಲಿ, ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ನಡೆಯುತ್ತಿರುವ ಹೋರಾಟ ಇದೀಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೂ ಬಿಗುವಿನ ವಾತಾವರಣ ಸೃಷ್ಟಿಸಿದ್ದು, ಮಧ್ಯಾಹ್ನ 4:30ಕ್ಕೆ ನಡೆಯಲಿರುವ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಯಾವ ರೀತಿಯ ಸ್ಪಂದನೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.












