


ಬೆಳಗಾವಿ ಬ್ರೇಕಿಂಗ್
ಕಬ್ಬಿಗೆ ಪ್ರತಿ ಟನ್ಗೆ 5,500 ರೂಪಾಯಿ ದರ ನಿಗದಿಗೆ ಆಗ್ರಹಿಸಿ ರೈತರ ಹೋರಾಟ ಮತ್ತಷ್ಟು ತೀವ್ರ
ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಜಿಲ್ಲಾಡಳಿತ ರಾಷ್ಟ್ರೀಯ ಹೆದ್ದಾರಿ ತಡೆಗೆ ನಿಷೇಧ ಹೇರಿದ್ದರೂ ರೈತರು ಅದನ್ನು ಲೆಕ್ಕಿಸದೆ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸದಂತೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸದಂತೆ ಆದೇಶ ಹೊರಡಿಸಿದ್ದರು. ಆದರೂ ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದಿರುವ ರೈತರು ಪಾದಯಾತ್ರೆ ಮೂಲಕ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ಆಗಮಿಸಿದ್ದಾರೆ.
ಹತ್ತರಗಿ ಟೋಲ್ ನಾಕಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 5,500 ರೂಪಾಯಿ ದರ ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ರೈತರು ಹೋರಾಟದ ಕಣಕ್ಕಿಳಿದಿದ್ದಾರೆ. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ನೀಡದ ಹಿನ್ನೆಲೆಯಲ್ಲಿ ಜೈಲ್ ಭರೋ ಚಳುವಳಿಗೂ ರೈತರು ಮುಂದಾಗಿದ್ದಾರೆ.
ಈಗಾಗಲೇ ಹಲವು ಸುತ್ತಿನ ಸಭೆಗಳು ನಡೆದರೂ ಕಬ್ಬಿನ ದರ ವಿಚಾರದಲ್ಲಿ ಅಂತಿಮ ನಿರ್ಧಾರ ಹೊರಬಿದ್ದಿಲ್ಲ. ರೈತರು ತಮ್ಮ ಬೇಡಿಕೆಯಿಂದ ಹಿಂದೆ ಸರಿಯಲು ಸಿದ್ಧರಿಲ್ಲ. ಮತ್ತೊಂದೆಡೆ ಸಕ್ಕರೆ ಕಾರ್ಖಾನೆ ಮಾಲೀಕರು ಕೂಡ ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡದಿರುವುದರಿಂದ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.
ಇದರ ನಡುವೆಯೇ ಜಿಲ್ಲಾಡಳಿತದ ನಿಷೇಧದ ಆದೇಶವನ್ನು ಮೀರಿ ರೈತರು ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿರುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಹತ್ತರಗಿ ಟೋಲ್ ನಾಕಾ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಒಟ್ಟಿನಲ್ಲಿ ಕಬ್ಬಿಗೆ 5,500 ರೂಪಾಯಿ ದರ ನಿಗದಿಪಡಿಸುವಂತೆ ಆಗ್ರಹಿಸಿ ಆರಂಭವಾಗಿರುವ ರೈತರ ಹೋರಾಟ ಇದೀಗ ರಾಷ್ಟ್ರೀಯ ಹೆದ್ದಾರಿಯತ್ತ ತಿರುಗಿದ್ದು, ಹತ್ತರಗಿ ಟೋಲ್ ನಾಕಾ ಬಳಿ ನಡೆಯುತ್ತಿರುವ ಜೈಲ್ ಭರೋ ಚಳುವಳಿ ಮುಂದಿನ ಹಂತದಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.










