ನೀರು ಸರಬರಾಜಿಗೆ ಕ್ರಮ ಕೈಗೊಳ್ಳಿ ನಿತೇಶ್ ಪಾಟೀಲ ಸೂಚನೆ
ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆಗಾಲ ವಿಳಂಬವಾಗುತ್ತಿರುವುದರಿಂದ ಜಿಲ್ಲೆಯ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುತ್ತದೆ. ಆದ್ದರಿಂದ ಎಲ್ಲ ತಹಶೀಲ್ದಾರರು ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗತ್ಯವಿರುವ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ಪೂರೈಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸೋಮವಾರ ನಡೆದ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು
ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಆಯಾ ತಾಲ್ಲೂಕು ಅಥವಾ ಮತಕ್ಷೇತ್ರದಲ್ಲಿ ಇರುವ ಸಮಸ್ಯೆಯನ್ನು ಕೂಲಂಕಷವಾಗಿ ಪರಿಶೀಲಿಸಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು. ಇದರ ಆಧಾರದ ಮೇಲೆ ಹೆಚ್ಚುವರಿ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಲಭ್ಯವಿರುವ ಅನುದಾನದಲ್ಲಿ ಶಾಸಕರ ಸಲಹೆಯ ಪ್ರಕಾರ ಕಾಮಗಾರಿಗಳನ್ನು ಆರಂಭಿಸಬೇಕು.
ಜನರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುರ್ತು ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿರುತ್ತದೆ.
ಪ್ರತಿ ತಾಲ್ಲೂಕಿಗೆ ಇನ್ನೂ ಹೆಚ್ಚಿನ ಅನುದಾನ ಹೊಂದಾಣಿಕೆ ಮೂಲಕ ಕೂಡ ಲಭಿಸಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬಹುದು.ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸೂಚನೆ:ಜಿಲ್ಲೆಯಲ್ಲಿ ಎಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ತಹಶೀಲ್ದಾರರು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಹಾಗೂ ತುರ್ತು ಕಾಮಗಾರಿ ಆರಂಭಿಸಲು ಅನುದಾನ ಲಭ್ಯವಿದ್ದು, ಈ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಬೇಕು ಎಂದು ಹೇಳಿದರು.