ಚಿತ್ರದುರ್ಗ: ಇಂದು ಬೆಳಗಿನ ಜಾವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40), ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ಮೃತಪಟ್ಟಿದ್ದಾರೆ.
ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವುಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಠಾಣೆ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪರಾರಿಯಾಗಿರುವ ಲಾರಿ ಚಾಲನ ಪತ್ತೆಗೆ ಬಲೆ ಬೀಸಲಾಗಿದೆ.