ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಿಂದೂ ಹೇಳಿಕೆಯನ್ನು ಮುಂದಿಟ್ಟುಕೊಂಡು ಅವರ ವಿರುದ್ಧ ಸಮರ ಸಾರಿದ್ದ ಬಿಜೆಪಿ, ಹಿಂದೂಪರ ಸಂಘಟನೆಗಳ ವಿರುದ್ಧ ಇದೀಗ ಸತೀಶ ಬೆಂಬಲಿಗರು, ವಿವಿಧ ಸಂಘಟನೆಗಳು ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ನಾವೆಲ್ಲಾ ಸತೀಶ ಜಾರಕಿಹೊಳಿ ಅವರ ಜೊತೆಗೆ ಇದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅಭಿಮಾನಿಗಳ ಬಳಗ, ವಿವಿಧ ದಲಿತಪರ ಸಂಘಟನೆಗಳು ಸತೀಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿ ಬೆಳಗಾವಿಯ ಸಿಪಿಎಡ್ ಮೈದಾನದಿಂದ ರ್ಯಾಲಿ ಆರಂಭಿಸಿದರು. ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಕೈಯಲ್ಲಿ ಸತೀಶ ಪರ ಭಿತ್ತಿ ಫಲಕಗಳನ್ನು ಹಿಡಿದುಕೊಂಡು ಮನುವಾದಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿ ಇನ್ನಿತರ ಬಿಜೆಪಿ ನಾಯಕರ ಭಾವಚಿತ್ರದ ಪ್ರತಿಕೃತಿ ದಹನ ಮಾಡಿದರು.ಇನ್ನು ಪ್ರತಿಭಟನಾ ರ್ಯಾಲಿಯಲ್ಲಿ ಕೇಸರಿ, ನೀಲಿ, ಕನ್ನಡ ಬಾವುಟ ಬಣ್ಣದ ಶಾಲು ಧರಿಸಿ ಸತೀಶ ಜಾರಕಿಹೊಳಿ ಅಭಿಮಾನಿಗಳು ಭಾಗಿಯಾಗಿದ್ದರು. ವೀರರಾಣಿ ಚನ್ನಮ್ಮಾಜಿ ವೃತ್ತ ಮಾರ್ಗವಾಗಿ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿತು. ಸಾವಿರಾರು ಸಂಖ್ಯೆಯಲ್ಲಿ ಸತೀಶ ಜಾರಕಿಹೊಳಿ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದು ಈ ವೇಳೆ ಕಂಡು ಬಂತು.