Uncategorized

ಧಾರಾಕಾರ ಮಳೆ ಕಾರಲಗಾ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ನೀರು!

ಬೆಳಗಾವಿ:

ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಖಾನಾಪುರ ತಾಲೂಕಿನ ಹಲವೆಡೆ ರಸ್ತೆಗಳು ಹಳ್ಳಕೊಳ್ಳಗಳಂತೆ ಭಾಸವಾಗುತ್ತಿವೆ.ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದಲ್ಲಿ ಪ್ರಮುಖ ರಸ್ತೆ ಮಳೆ ನೀರಿನಿಂದ ಸಂಪೂರ್ಣ ಆವರಿಸಿಕೊಂಡಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ರಸ್ತೆಯಲ್ಲಿ ನೀರು ನಿಂತಿರುವುದರಿಂದ ವಾಹನ ಸಾವಾರರು ಹಾಗೂ ಸ್ಥಳೀಯರು ಜೀವಭಯದ ನಡುವೆಯೇ ಓಡಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಪರಿಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿದ್ದಾರೆ.ಅಲ್ಲದೇ ಸರಿಯಾದ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಳೆಗಾಲಕ್ಕೂ ಮುನ್ನ ಚರಂಡಿ ಸ್ವಚ್ಛತೆ ಹಾಗೂ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಕಲ್ಪಿಸದ ಪರಿಣಾಮ ಈ ಸಮಸ್ಯೆ ಉಂಟಾಗಿದೆ ಎಂದು ಅವರು ದೂರಿದ್ದಾರೆ.

ಇದೇ ವೇಳೆ ಗ್ರಾಮದ ಕೆಲ ನಿವಾಸಗಳಿಗೂ ಮಳೆ ನೀರು ನುಗ್ಗಿ ಮನೆಯಲ್ಲಿದ್ದ ವಸ್ತುಗಳು ಹಾನಿಗೊಳಗಾಗಿವೆ. ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸ ಪಡಬೇಕಾಯಿತು ಮಳೆ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಗ್ರಾಮಸ್ಥರು ನಿತ್ಯದ ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಹಾಗೂ ಚರಂಡಿ ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

TV24 News Desk
the authorTV24 News Desk

Leave a Reply